ಪತ್ರಕರ್ತ ರಂಗನಾಥ್ ನಿಧನಕ್ಕೆ ಗಣ್ಯರ ಸಂತಾಪ
ಶಿವಮೊಗ್ಗ: ಕನ್ನಡ ಮೀಡಿಯಂ 24x7 ವಾಹಿನಿಯ ಮಾರುಕಟ್ಟೆ ಪ್ರತಿನಿಧಿಯಾಗಿದ್ದ ಹಾಗೂ ಈ ಹಿಂದೆ ಜನವಾರ್ತೆ, ನಮ್ಮನಾಡು, ಕನ್ನಡಪ್ರಭ ಮತ್ತು ಎಚ್ಚರಿಕೆ ಪತ್ರಿಕೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದ ಹಿರಿಯ ಪತ್ರಕರ್ತ ರಂಗನಾಥ್ (44) ಅವರು ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸೋಮವಾರ ಮಧ್ಯಾಹ್ನ ಅವರು ನಿಧನರಾದರು.
ಸರಳ, ಸಜ್ಜನಿಕೆಯ ವ್ಯಕ್ತಿತ್ವದ ಮೂಲಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ ತಮ್ಮದೇ ಆದ ಸ್ನೇಹ ಬಳಗವನ್ನು ಹೊಂದಿದ್ದ ರಂಗನಾಥ್ ಅವರು ಹಲವು ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದರು. ಅವರ ಅಕಾಲಿಕ ನಿಧನವು ಪತ್ರಿಕಾ ವಲಯಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಸಹೋದ್ಯೋಗಿಗಳು ಹಾಗೂ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.
ಮೃತರು ತಾಯಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಕುಟುಂಬದ ಸದಸ್ಯರು ಮತ್ತು ಅಪಾರ ಬಂಧು-ಬಳಗದ ಆಕ್ರಂದನ ಮುಗಿಲು ಮುಟ್ಟಿದೆ.
ರಂಗನಾಥ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಶಿವಮೊಗ್ಗ ನಗರದ ತ್ರಿಮೂರ್ತಿ ನಗರ, ನಾಲ್ಕನೇ ತಿರುವಿನಲ್ಲಿರುವ ಅವರ ನಿವಾಸದಲ್ಲಿ ಮಂಗಳವಾರ ಬೆಳಿಗ್ಗೆ 11 ಗಂಟೆಗೆ ವ್ಯವಸ್ಥೆ ಮಾಡಲಾಗಿದೆ. ಬಳಿಕ ಅಂತ್ಯಕ್ರಿಯೆ ನೆರವೇರಲಿದೆ.
ಅವರ ನಿಧನಕ್ಕೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಪತ್ರಕರ್ತರು, ಸಾರ್ವಜನಿಕರು ಹಾಗೂ ಗಣ್ಯರು ತೀವ್ರ ಸಂತಾಪ ಸೂಚಿಸಿದ್ದು, ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಕುಟುಂಬಕ್ಕೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ.

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ