ಶಿವಮೊಗ್ಗ ಜಿಲ್ಲಾಧಿಕಾರಿಗಳಿಗೆ ಕನ್ನಡ ಕದಂಬ ವೇದಿಕೆ ಮನವಿ: ಟಾಟಾ ಪವರ್ ಕಂಪನಿಗೆ ವಿದ್ಯುತ್ ವಿತರಣಾ ಪರವಾನಗಿ ನೀಡದಂತೆ ಒತ್ತಾಯ
ಶಿವಮೊಗ್ಗ, ಜೂನ್ 19: ರಾಜ್ಯದ ವಿದ್ಯುತ್ ವಿತರಣಾ ಕ್ಷೇತ್ರದಲ್ಲಿ ಖಾಸಗಿ ಸಂಸ್ಥೆಗಳ ಪ್ರವೇಶವನ್ನು ವಿರೋಧಿಸಿ, "ಮುಂಬೈ ಟಾಟಾ ಪವರ್ ಕಂಪನಿ ಲಿಮಿಟೆಡ್"ಗೆ ವಿದ್ಯುತ್ ವಿತರಣಾ ಪರವಾನಗಿ ನೀಡದಂತೆ ರಾಜ್ಯ ಸರ್ಕಾರ ಹಾಗೂ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (KERC) ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಶಿವಮೊಗ್ಗ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಬೆಸ್ಕಾಂ, ಜೆಸ್ಕಾಂ, ಹೆಸ್ಕಾಂ, ಮೆಸ್ಕಾಂ ಸೇರಿದಂತೆ ರಾಜ್ಯ ಸರ್ಕಾರದ ವಿದ್ಯುತ್ ಸರಬರಾಜು ಸಂಸ್ಥೆಗಳ ವ್ಯಾಪ್ತಿಯ 19 ಜಿಲ್ಲೆಗಳಲ್ಲಿ ಸಮಾನಾಂತರವಾಗಿ ವಿದ್ಯುತ್ ವಿತರಣೆ ನಡೆಸಲು ಮುಂಬೈ ಮೂಲದ ಬಾಬಾ ಪವರ್ ಕಂಪನಿ ಅರ್ಜಿ ಸಲ್ಲಿಸಿರುವ ಹಿನ್ನೆಲೆಯಲ್ಲಿ ಈ ವಿರೋಧ ವ್ಯಕ್ತವಾಗಿದೆ. ಈ ಕುರಿತು ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ಸಾರ್ವಜನಿಕರಿಂದ ಆಕ್ಷೇಪಣೆ ಹಾಗೂ ಅಭಿಪ್ರಾಯಗಳನ್ನು ಆಹ್ವಾನಿಸಿ ಅಧಿಸೂಚನೆ ಹೊರಡಿಸಿದೆ.
ಮನವಿಯಲ್ಲಿ, ರಾಜ್ಯ ಸರ್ಕಾರವು ಇದುವರೆಗೆ ಗ್ರಾಮೀಣ ವಿದ್ಯುದೀಕರಣ, ಕೃಷಿ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್, ಭಾಗ್ಯಜ್ಯೋತಿ, ಕುಟೀರಜ್ಯೋತಿ ಸೇರಿದಂತೆ ಹಲವು ಜನಪರ ಯೋಜನೆಗಳನ್ನು ಲಾಭ-ನಷ್ಟದ ಲೆಕ್ಕಾಚಾರವಿಲ್ಲದೆ ಯಶಸ್ವಿಯಾಗಿ ಜಾರಿಗೊಳಿಸಿದೆ ಎಂದು ಉಲ್ಲೇಖಿಸಲಾಗಿದೆ. ಇಂತಹ ಸಾರ್ವಜನಿಕ ಸೇವಾ ಕ್ಷೇತ್ರಕ್ಕೆ ಖಾಸಗಿ ಕಂಪನಿಗಳಿಗೆ ಅವಕಾಶ ನೀಡುವುದರಿಂದ ಸರ್ಕಾರದ ನಿಯಂತ್ರಣ ಕಡಿಮೆಯಾಗುವ ಜೊತೆಗೆ ಗ್ರಾಹಕರ ನಡುವೆ ಅಸಮಾನತೆ ಉಂಟಾಗುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಲಾಗಿದೆ.
ಖಾಸಗಿ ಸಂಸ್ಥೆಗಳು ಲಾಭದ ಉದ್ದೇಶದಿಂದ ಕಾರ್ಯನಿರ್ವಹಿಸುವುದರಿಂದ ರೈತರು, ಸಣ್ಣ ಕೈಗಾರಿಕೆಗಳು ಹಾಗೂ ಸಾಮಾನ್ಯ ಗ್ರಾಹಕರ ಹಿತಾಸಕ್ತಿಗೆ ಧಕ್ಕೆಯಾಗಬಹುದು ಎಂದು ಮನವಿಯಲ್ಲಿ ಹೇಳಲಾಗಿದೆ. ಅಲ್ಲದೆ, ವಿದ್ಯುತ್ ಇಲಾಖೆಯಲ್ಲಿ ಸಾವಿರಾರು ಹುದ್ದೆಗಳು ಖಾಲಿ ಇರುವ ಸಂದರ್ಭದಲ್ಲೇ ಖಾಸಗೀಕರಣದಿಂದ ನೌಕರರ ಭವಿಷ್ಯಕ್ಕೂ ಆತಂಕ ಎದುರಾಗಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಲಾಗಿದೆ.
ರಾಜ್ಯದ ರೈತರು, ಕೈಗಾರಿಕೆಗಳು, ಗ್ರಾಹಕರು ಹಾಗೂ ವಿದ್ಯುತ್ ನೌಕರರ ಹಿತದೃಷ್ಟಿಯಿಂದ ಟಾಟಾ ಪವರ್ ಕಂಪನಿಯ ಪರವಾನಗಿ ಅರ್ಜಿಯನ್ನು ತಿರಸ್ಕರಿಸುವಂತೆ ಮನವಿಯಲ್ಲಿ ಸರ್ಕಾರವನ್ನು ಒತ್ತಾಯಿಸಲಾಗಿದೆ. ಈ ವಿಷಯ ರಾಜ್ಯದಾದ್ಯಂತ ಚರ್ಚೆಗೆ ಗ್ರಾಸವಾಗಿದ್ದು, ವಿವಿಧ ಸಂಘಟನೆಗಳು ಹಾಗೂ ವಿದ್ಯುತ್ ನೌಕರರ ವಲಯದಲ್ಲಿಯೂ ತೀವ್ರ ವಿರೋಧ ವ್ಯಕ್ತವಾಗುತ್ತಿದೆ ಎಂದು ರಾಜ್ಯಾಧ್ಯಕ್ಷರದ ವಿಶ್ವನಾಥ್ ಗೌಡ್ರು ಜಿಲ್ಲಾಧಿಕಾರಿಗಳಿಗೆ ಮನವಿ ಸಾಲಿಸುವ ಮೂಲಕ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ