ಜಮೀರ್ ಅಹಮದ್ ಖಾನ್‌ಗೆ ಡಿಸಿಎಂ ಸ್ಥಾನ ನೀಡಲು ಆಗ್ರಹಿಸಿ ಶಿವಮೊಗ್ಗದಲ್ಲಿ ಮುಸ್ಲಿಂ ಸಮುದಾಯದ ಪ್ರತಿಭಟನೆ
ಶಿವಮೊಗ್ಗ, ಜೂ.8: ರಾಜ್ಯದ ಹಿರಿಯ ಸಚಿವರಾದ ಬಿ.ಝಡ್. ಜಮೀರ್ ಅಹಮದ್ ಖಾನ್ ಅವರನ್ನು ಕರ್ನಾಟಕದ ಉಪಮುಖ್ಯಮಂತ್ರಿಯಾಗಿ ನೇಮಿಸಬೇಕು ಎಂದು ಒತ್ತಾಯಿಸಿ ಶಿವಮೊಗ್ಗ ಜಿಲ್ಲೆಯ ಮುಸ್ಲಿಂ ಸಮುದಾಯದ ವತಿಯಿಂದ ಭಾರಿ ಪ್ರತಿಭಟನೆ ನಡೆಯಿತು.
ಪ್ರತಿಭಟನಾಕಾರರು ಮಾತನಾಡಿ, ಜಮೀರ್ ಅಹಮದ್ ಖಾನ್ ಅವರು ಜನಪರ, ಜಾತ್ಯಾತೀತ ಮೌಲ್ಯಗಳನ್ನು ಹೊಂದಿರುವ ಪ್ರಭಾವಿ ನಾಯಕರಾಗಿದ್ದು, ಅಹಿಂದ ವರ್ಗಗಳು ಹಾಗೂ ಅಲ್ಪಸಂಖ್ಯಾತ ಸಮುದಾಯದ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಹೇಳಿದರು. ಶಾಸಕರಾಗಿ ಮತ್ತು ಸಚಿವರಾಗಿ ಅವರು ಅಭಿವೃದ್ಧಿ ಕಾರ್ಯಗಳು ಹಾಗೂ ಜನಪರ ಯೋಜನೆಗಳ ಮೂಲಕ ಜನರ ವಿಶ್ವಾಸ ಗಳಿಸಿದ್ದಾರೆ ಎಂದು ಅಭಿಪ್ರಾಯಪಟ್ಟರು.
ಕಾಂಗ್ರೆಸ್ ಪಕ್ಷಕ್ಕೆ ದಶಕಗಳಿಂದ ಬೆಂಬಲ ನೀಡುತ್ತಿರುವ ಮುಸ್ಲಿಂ ಸಮುದಾಯಕ್ಕೆ ಸೂಕ್ತ ರಾಜಕೀಯ ಪ್ರಾತಿನಿಧ್ಯ ದೊರೆಯಬೇಕಿದ್ದು, ಜಮೀರ್ ಅಹಮದ್ ಖಾನ್ ಅವರಿಗೆ ಉಪಮುಖ್ಯಮಂತ್ರಿಯ ಸ್ಥಾನ ನೀಡುವುದು ನ್ಯಾಯಸಮ್ಮತವಾಗಿರುತ್ತದೆ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಅಲ್ಲದೆ, ಮುಸ್ಲಿಂ ಸಮುದಾಯದ ಇನ್ನಷ್ಟು ಅರ್ಹ ಶಾಸಕರಿಗೆ ಸಚಿವ ಸಂಪುಟದಲ್ಲಿ ಅವಕಾಶ ಕಲ್ಪಿಸಬೇಕೆಂದು ಒತ್ತಾಯಿಸಿದರು.
ರಾಜ್ಯ ಸರ್ಕಾರ ಮತ್ತು ಕಾಂಗ್ರೆಸ್ ಹೈಕಮಾಂಡ್ ತಕ್ಷಣವೇ ಈ ಕುರಿತು ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ಹೋರಾಟವನ್ನು ತೀವ್ರಗೊಳಿಸಿ ವ್ಯಾಪಕ ಪ್ರತಿಭಟನೆಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಮುಸ್ಲಿಂ ಹಕ್ಕುಗಳ ವೇದಿಕೆ ಎಚ್ಚರಿಕೆ ನೀಡಿತು.
ಪ್ರತಿಭಟನೆಯ ನೇತೃತ್ವವನ್ನು ಸಂಘಟನೆಯ ಅಧ್ಯಕ್ಷ ಮುನವರ್ ಪಾಷಾ (ಮುನ್ನು), ಉಪಾಧ್ಯಕ್ಷ ಮೊಹಮ್ಮದ್ ಸಾದಾತ್ ಉಲ್ಲಾ ಹಾಗೂ ಕಾರ್ಯದರ್ಶಿ ಸೈಯದ್ ಮುಜಿಬುಲ್ಲಾ ವಹಿಸಿದ್ದರು. ಸಮಾಜದ ಮುಖಂಡರಾದ ಇಮ್ರಾನ್, ಸೈಪುಲ್ಲಾ, ಶಫಿವುಲ್ಲಾ ಸಾಬ್, ಯಹ್ಯಾ ಸೇರಿದಂತೆ ನೂರಾರು ಮಂದಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ