ಗಾಂಜಾ ಚಾಳಿಗೆ ವಿರೋಧಿಸಿದ್ದ ಅಜ್ಜಿ ಹತ್ಯೆ; ಮೊಮ್ಮಗನಿಂದಲೇ ಸೈಜುಕಲ್ಲು ಎತ್ತಿಹಾಕಿ ಕೊಲೆ!
ಶಿವಮೊಗ್ಗ, ಜುಲೈ 1: ನಗರದ ಮಿಳಘಟ್ಟ ವಾರ್ಡಿನ ಆನಂದರಾವ್ ಬಡಾವಣೆಯಲ್ಲಿ ಬುಧವಾರ ಸಂಜೆ ಬೆಚ್ಚಿಬೀಳಿಸುವ ಘಟನೆ ನಡೆದಿದ್ದು, ಗಾಂಜಾ ಚಾಳಿಯ ವಿರುದ್ಧ ಪೊಲೀಸರಿಗೆ ದೂರು ನೀಡಲು ತೆರಳುತ್ತಿದ್ದ ವೃದ್ಧೆಯನ್ನು ಆಕೆಯ ಮೊಮ್ಮಗನೇ ಸೈಜುಕಲ್ಲು ಎತ್ತಿಹಾಕಿ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ.
ಆನಂದರಾವ್ ಬಡಾವಣೆಯ ತಖ್ವಾ ಮಸೀದಿ ಸಮೀಪದ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಮೃತ ವೃದ್ಧೆಯು ತನ್ನ ಮೊಮ್ಮಗ ಕಿಶೋರ್‌ನ ಗಾಂಜಾ ವ್ಯಸನ ಮತ್ತು ಚಟುವಟಿಕೆಗಳ ಬಗ್ಗೆ ಹಲವು ಬಾರಿ ಪೊಲೀಸರಿಗೆ ದೂರು ನೀಡುತ್ತಿದ್ದರೆಂದು ಸ್ಥಳೀಯರು ತಿಳಿಸಿದ್ದಾರೆ.
ಬುಧವಾರ ಸಂಜೆ ಸಹ ದೂರು ನೀಡಲು ಹೊರಟಿದ್ದ ವೇಳೆ, ಕಿಶೋರ್ ಅಜ್ಜಿಯೊಂದಿಗೆ ವಾಗ್ವಾದ ನಡೆಸಿ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಹಲ್ಲೆಯಿಂದ ವೃದ್ಧೆ ಕೆಳಗೆ ಬಿದ್ದ ಬಳಿಕ, ಆಕೆಯ ತಲೆಯ ಮೇಲೆ ಸೈಜುಕಲ್ಲು ಎತ್ತಿಹಾಕಿ ಹತ್ಯೆ ಮಾಡಿರುವ ಆರೋಪ ಕೇಳಿಬಂದಿದೆ.
ಸ್ಥಳೀಯರ ಮಾಹಿತಿ ಮೇರೆಗೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆಯೇ ಎಂಬ ಬಗ್ಗೆ ಅಧಿಕೃತ ಮಾಹಿತಿ ನಿರೀಕ್ಷೆಯಲ್ಲಿದೆ.
ಮುಖ್ಯವಾಗಿ , ಮಿಳಘಟ್ಟ ಪ್ರದೇಶದಲ್ಲಿ ಗಾಂಜಾ ಮಾರಾಟ ಮತ್ತು ವ್ಯಸನ ಹೆಚ್ಚುತ್ತಿರುವ ಬಗ್ಗೆ ಈ ಹಿಂದೆಯೇ ಸ್ಥಳೀಯರು ಪೊಲೀಸ್ ಇಲಾಖೆಗೆ ಹಲವು ಬಾರಿ ದೂರು ಸಲ್ಲಿಸಿ ಕಟ್ಟುನಿಟ್ಟಿನ ಕ್ರಮಕ್ಕೆ ಆಗ್ರಹಿಸಿದ್ದರು. ಇದೀಗ ಅದೇ ಸಮಸ್ಯೆಗೆ ಸಂಬಂಧಿಸಿದಂತೆ ವೃದ್ಧೆಯೊಬ್ಬರು ಪ್ರಾಣ ಕಳೆದುಕೊಂಡಿರುವುದು ಸಾರ್ವಜನಿಕರಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದೆ.
ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ